ಕಲಾ ಇತಿಹಾಸ ಕ್ಷೇತ್ರಕ್ಕೆ ನೀಡಿರುವ ಕೊಡುಗೆಯನ್ನು ಗುರುತಿಸಿ ಕರ್ನಾಟಕ ಇತಿಹಾಸ ಅಕಾಡೆಮಿಯಿಂದ ಗೌರವ; ಸಿಯುಕೆ ಕುಲಪತಿ, ಕುಲಸಚಿವರಿಂದ ಅಭಿನಂದನೆ.
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ಸಂಗೀತ ಮತ್ತು ಲಲಿತ ಕಲಾ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಶಿವಾನಂದ ಬಂಟನೂರು ಅವರಿಗೆ ಕಲಾ ಇತಿಹಾಸ ಕ್ಷೇತ್ರಕ್ಕೆ ನೀಡಿರುವ ಕೊಡುಗೆಯನ್ನು ಗುರುತಿಸಿ ಕರ್ನಾಟಕ ಇತಿಹಾಸ ಅಕಾಡೆಮಿಯ ವತಿಯಿಂದ ಡಾ. ಪ್ರತಿಭಾ ಚಿಣ್ಣಪ್ಪ ಸ್ಮರಣಾರ್ಥ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಡಾ. ಶಿವಾನಂದ ಬಂಟನೂರು ಅವರ ಸಾಧನೆಗೆ ಸಂತಸ ವ್ಯಕ್ತಪಡಿಸಿರುವ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಹಾಗೂ ಕುಲಸಚಿವ ಪ್ರೊ. ಆರ್. ಆರ್. ಬಿರಾದಾರ ಅವರು ಅವರನ್ನು ಅಭಿನಂದಿಸಿದ್ದಾರೆ. ಈ ಗೌರವವು ವಿಶ್ವವಿದ್ಯಾಲಯಕ್ಕೆ ಹೆಮ್ಮೆಯ ಸಂಗತಿಯಾಗಿದ್ದು, ಅವರ ಸಾಧನೆ ಇತರರಿಗೆ ಪ್ರೇರಣೆಯಾಗಲಿದೆ ಎಂದು ತಿಳಿಸಿದ್ದಾರೆ.
ಪ್ರಶಸ್ತಿ ಸ್ವೀಕರಿಸಿದ ಡಾ. ಶಿವಾನಂದ ಬಂಟನೂರು ಅವರು, ಈ ಗೌರವ ದೊರೆಯುವಲ್ಲಿ ವಿಶ್ವವಿದ್ಯಾಲಯದ ಕುಲಪತಿ, ಕುಲಸಚಿವರು, ವಿವಿಧ ವಿಭಾಗಗಳ ಡೀನ್ಗಳು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೀಡಿದ ಸಹಕಾರ ಮತ್ತು ಪ್ರೋತ್ಸಾಹಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. ಅಲ್ಲದೆ, ವಿದ್ವತ್ಲೋಕದ ವಿದ್ವಾಂಸರು ಹಾಗೂ ಇತಿಹಾಸಾಸಕ್ತರ ಬೆಂಬಲ ಮತ್ತು ಪ್ರೋತ್ಸಾಹಕ್ಕೆ ತಾವು ಸದಾ ಋಣಿಯಾಗಿರುವುದಾಗಿ ತಿಳಿಸಿದ್ದಾರೆ.
ಕರ್ನಾಟಕ ಇತಿಹಾಸ ಅಕಾಡೆಮಿಯ 40ನೇ ವಾರ್ಷಿಕ ರಾಷ್ಟ್ರೀಯ ಸಮ್ಮೇಳನ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವು ಇತ್ತೀಚೆಗೆ ಬೀದರ್ ಜಿಲ್ಲೆಯ ಬಾಲ್ಕಿ ತಾಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲದ ಅನುಭವ ಮಂಟಪದಲ್ಲಿ ನಡೆಯಿತು.
ಸಮಾರಂಭದಲ್ಲಿ ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಶ್ರೀ ಈಶ್ವರ ಖಂಡ್ರೆ, ಕರ್ನಾಟಕ ಇತಿಹಾಸ ಅಕಾಡೆಮಿಯ ಅಧ್ಯಕ್ಷ ಡಾ. ದೇವರಕೊಂಡಾರೆಡ್ಡಿ, ಬಸವಕಲ್ಯಾಣದ ಅನುಭವ ಮಂಟಪ ಟ್ರಸ್ಟ್ನ ಅಧ್ಯಕ್ಷ ಹಾಗೂ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು, ಗುರುಬಸವ ಪಟ್ಟದೇವರು, ಸಮ್ಮೇಳನದ ಸರ್ವಾಧ್ಯಕ್ಷ ಡಾ. ಕೆ. ರವೀಂದ್ರನಾಥ್ ಹಾಗೂ ಹಂಪಿ ವಿಶ್ವವಿದ್ಯಾಲಯದ ಕುಲಪತಿ ಡಾ. ಡಿ.ವಿ.ಪರಮ ಶಿವಮೂರ್ತಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಡಾ. ಶಿವಾನಂದ ಬಂಟನೂರು ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ವಿಕ್ರಮ ಓದುಗರ ವಾಟ್ಸಪ್ ಬಳಗಕ್ಕೆ ಸೇರಲು ಈ ಸಂಖ್ಯೆಯನ್ನು ನಿಮ್ಮ ಮೊಬೈಲ್ನಲ್ಲಿ ಸೇವ್ ಮಾಡಿಕೊಂಡು ನಮಗೊಂದು ಸಂದೇಶ ಕಳುಹಿಸಿ. ಮೊಬೈಲ್ ಸಂಖ್ಯೆ: 98800 21122
